ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇವರು ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ಅಕ್ಟೋಬರ್ 23ರಿಂದ 25ರ ವರೆಗೆ ಜರಗಿದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ರಕ್ಷಾ ಅಂಚನ್‍ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 3 ಕಿ.ಮೀ ನಡಿಗೆ ರೇಸ್‍ನಲ್ಲಿ ರಕ್ಷಾ ಅಂಚನ್‍ರವರು ಕೇವಲ 16.41ಸೆ.ನಲ್ಲಿ ಗುರಿಯನ್ನು ತಲುಪಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ಈ ಸಾಧನೆ ಮಾಡಿದ್ದಾರೆ. ಮಾತ್ರವಲ್ಲದೆ ಪಂಜಾಬ್‍ನಲ್ಲಿ ನಡೆಯುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ರಕ್ಷಾರವರು ಈ ಮೊದಲು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ, ಪುತ್ತೂರು ಕೊಂಬೆಟ್ಟುವಿನಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ, ಉಡುಪಿ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆದ ಕರ್ನಾಟಕ ಅಂತರ್-ಜಿಲ್ಲಾ ರಾಜ್ಯ ಅಮೆಚೂರು ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಪ್ರಥಮ ಪಿಯುಸಿ ವಿದ್ಯಾಭ್ಯಾಸ ಸಂದರ್ಭದಲ್ಲಿ ಕಡಬ-ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ 3ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಚಿನ್ನದ ಪದಕ, ಮೂಡಬಿದ್ರೆ ಆಳ್ವಾಸ್ ಕಾಲೇಜ್‍ನ ಸ್ವರಾಜ್ಯ ಮೈದಾನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ, ಮೈಸೂರು ಚಾಮುಂಡೇಶ್ವರಿ ವಿಹಾರ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನು ಗಳಿಸಿದ್ದರು. ರಕ್ಷಾ ಅಂಚನ್‍ರವರು ನೆಲ್ಯಾಡಿ ನಿವಾಸಿ ರಮೇಶ್ ಅಂಚನ್ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್‍ರವರ ಸುಪುತ್ರಿಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ವಂ|ವಿಜಯ್ ಲೋಬೋ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿ’ಸೋಜ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.